Skip to content
The Believer's Library

Indian Revised Version (IRV) Kannada - 2019

Mark 16 IRVKan

Side by side with the Father's Heart Bible™

ಯೇಸುವಿನ ಪುನರುತ್ಥಾನ

1ಸಬ್ಬತ್ ದಿನ ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಮತ್ತು ಸಲೋಮಿಯೂ ಯೇಸುವಿನ ದೇಹಕ್ಕೆ ಹಚ್ಚುವುದಕ್ಕಾಗಿ ಸುಗಂಧ ದ್ರವ್ಯಗಳನ್ನು ಕೊಂಡರು. 2ಮತ್ತು ವಾರದ ಮೊದಲನೆಯ ದಿನದ ಬೆಳಿಗ್ಗೆ ಹೊತ್ತು ಮೂಡುವಾಗ ಅವರು ಸಮಾಧಿಯ ಬಳಿಗೆ ಬಂದರು.

3“ಸಮಾಧಿಯ ಬಾಗಿಲಿನಿಂದ ಕಲ್ಲನ್ನು ನಮಗೋಸ್ಕರ ಉರುಳಿಸುವವರು ಯಾರು?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು. 4ಸಮಾಧಿಯ ಕಡೆಗೆ ನೋಡಿದಾಗ ಆ ದೊಡ್ಡ ಕಲ್ಲು ಉರುಳಿಸಲ್ಪಟ್ಟಿರುವುದನ್ನು ಕಂಡರು. 5ಅವರು ಸಮಾಧಿಯೊಳಗೆ ಹೋಗಿ, ಒಬ್ಬ ಯೌವನಸ್ಥನು ಬಿಳಿ ನಿಲುವಂಗಿಯನ್ನು ಧರಿಸಿಕೊಂಡು ಬಲ ಭಾಗದಲ್ಲಿ ಕುಳಿತಿರುವುದನ್ನು ಕಂಡು ಬೆಚ್ಚಿಬೆರಗಾದರು.

6ಅವನು ಅವರಿಗೆ, “ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟಿದ್ದ ನಜರೇತಿನ ಯೇಸುವನ್ನು ಹುಡುಕುತ್ತಿರಲ್ಲವೇ. ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ; ಆತನನ್ನು ಇಟ್ಟಿದ್ದ ಸ್ಥಳ ಇದೇ ನೋಡಿರಿ, 7ಆದರೆ ನೀವು ಹೋಗಿ ಆತನ ಶಿಷ್ಯರಿಗೂ ಪೇತ್ರನಿಗೂ ಆತನು ನಿಮಗೆ ಹೇಳಿದಂತೆ ನಿಮಗಿಂತ ಮೊದಲು ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ” ಎಂದು ಹೇಳಿದನು.

8ಅವರು ವಿಸ್ಮಯಗೊಂಡು ನಡುಗುತ್ತಾ ಹೊರಕ್ಕೆ ಬಂದು ಸಮಾಧಿಯ ಬಳಿಯಿಂದ ಓಡಿಹೋದರು; ಅವರು ಹೆದರಿಕೊಂಡಿದ್ದರಿಂದ ಯಾರಿಗೂ ಏನೂ ಹೇಳಲಿಲ್ಲ.

9ವಾರದ ಮೊದಲನೆಯ ದಿನ ಬೆಳಿಗ್ಗೆ ಯೇಸು ಜೀವಿತನಾಗಿ ಎದ್ದ ಮೇಲೆ ಮಗ್ದಲದ ಮರಿಯಳಿಗೆ ಮೊದಲು ಕಾಣಿಸಿಕೊಂಡನು. ಆತನು ಆಕೆಯನ್ನು ಏಳು ದೆವ್ವಗಳಿಂದ ಬಿಡಿಸಿದ್ದನು. 10ಆಕೆ ಹೋಗಿ ಆತನು ಕಾಣಿಸಿಕೊಂಡದ್ದನ್ನು ಆತನ ಜೊತೆಯಲ್ಲಿದ್ದವರಿಗೆ ತಿಳಿಸಿದಳು; ಅವರು ಶೋಕಿಸುತ್ತಾ ಅಳುತ್ತಿದ್ದರು. 11“ಆತನು ಬದುಕಿದ್ದಾನೆ ನನಗೆ ಕಾಣಿಸಿಕೊಂಡನು” ಎಂದು ಅವಳು ಹೇಳಿದ ಮಾತನ್ನು ಅವರು ನಂಬಲಿಲ್ಲ.

ಯೇಸು ಜೀವಿತನಾಗಿ ಎದ್ದ ಮೇಲೆ ತನ್ನ ಶಿಷ್ಯರಿಗೆ ಕಾಣಿಸಿಕೊಂಡಿದ್ದು

12ಇದಾದ ಮೇಲೆ ಶಿಷ್ಯರಲ್ಲಿ ಇಬ್ಬರು ಊರಿಗೆ ಪ್ರಯಾಣ ಮಾಡುತ್ತಿರುವಾಗ ಆತನು ಅವರಿಗೆ ಬೇರೆ ರೂಪದಲ್ಲಿ ಕಾಣಿಸಿಕೊಂಡನು. 13ಅವರು ಹೋಗಿ ಉಳಿದ ಶಿಷ್ಯರಿಗೆ ತಿಳಿಸಿದರು. ಆದರೆ ಶಿಷ್ಯರು ಅವರನ್ನೂ ನಂಬಲಿಲ್ಲ.

14ಅನಂತರ ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕುಳಿತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ನೋಡಿದವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು. 15ಆ ಮೇಲೆ ಅವರಿಗೆ, “ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ. 16ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು; ನಂಬದೇ ಹೋಗುವವನು ದಂಡನೆಗೆ ಗುರಿಯಾಗುವನು.

17“ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು, ಹೊಸ ಭಾಷೆಗಳಲ್ಲಿ ಮಾತನಾಡುವರು; 18ಹಾವುಗಳನ್ನು ಕೈಗಳಿಂದ ಎತ್ತಿಕೊಳ್ಳುವರು; ವಿಷಪದಾರ್ಥಗಳನ್ನೇನಾದರು ಕುಡಿದರೂ ಅವರಿಗೆ ಯಾವ ಹಾನಿಯೂ ಆಗುವುದಿಲ್ಲ. ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಸ್ವಸ್ಥವಾಗುವುದು” ಎಂದು ಹೇಳಿದನು.

ಯೇಸು ಪರಲೋಕಕ್ಕೆ ಒಯ್ಯಲ್ಪಟ್ಟದ್ದು

19ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು. 20ಅನಂತರ ಅವರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಸಂಗಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ದೃಢಪಡಿಸುತ್ತಾ ಇದ್ದನು.

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]