Skip to content
The Believer's Library

Indian Revised Version (IRV) Kannada - 2019

Psalms 22 IRVKan

Side by side with the Father's Heart Bible™

(ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಉದಯದ ಜಿಂಕೆ ಎಂಬ ರಾಗದ ಮೇಲೆ ಹಾಡತಕ್ಕದ್ದು; ದಾವೀದನ ಕೀರ್ತನೆ.)

ಘೋರಬಾಧೆಪಟ್ಟ ಭಕ್ತನ ಮನಃಪೂರ್ವಕ ಪ್ರಾರ್ಥನೆ

1ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ?ನೀನು ಏಕೆ ನನಗೆ ಸಹಾಯಮಾಡದೆಯೂ, ನನ್ನ ಕೂಗನ್ನು ಕೇಳದೆಯೂ ದೂರವಾಗಿದ್ದೀ?

2ನನ್ನ ದೇವರೇ, ಹಗಲಿನಲ್ಲಿ ಮೊರೆಯಿಡುತ್ತೇನೆ; ಪ್ರತ್ಯುತ್ತರವೇ ಇಲ್ಲ;ರಾತ್ರಿಯಲ್ಲಿಯೂ ನನಗೆ ಉಪಶಮನವಿಲ್ಲ.

3ಇಸ್ರಾಯೇಲರ ಸ್ತೋತ್ರಸಿಂಹಾಸನದಲ್ಲಿ ಇರುವಾತನೇ,ನೀನು ಪವಿತ್ರಸ್ವರೂಪನು.

4ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸವಿಟ್ಟರು;ನಿನ್ನನ್ನು ನಂಬಿ ಉದ್ಧಾರವಾದರು.

5ನಿನಗೆ ಮೊರೆಯಿಟ್ಟು ವಿಮುಕ್ತರಾದರು;ನಿನ್ನಲ್ಲಿ ವಿಶ್ವಾಸವಿಟ್ಟು ಆಶಾಭಂಗಪಡಲಿಲ್ಲ.

6ನಾನಾದರೋ ಹುಳದಂಥವನೇ ಹೊರತು ಮನುಷ್ಯನಲ್ಲ;ಮನುಷ್ಯರಿಂದ ನಿಂದಿಸಲ್ಪಟ್ಟು ಜನರಿಂದ ತಿರಸ್ಕಾರ ಹೊಂದಿದ್ದೇನೆ.

7ನನ್ನನ್ನು ನೋಡುವವರೆಲ್ಲರೂ ಹಾಸ್ಯಮಾಡುತ್ತಾರೆ;ಅವರು ಓರೇ ತುಟಿ ಮಾಡಿ ತಲೆ ಆಡಿಸುತ್ತಾ,

8“ಯೆಹೋವನು ತನ್ನನ್ನು ರಕ್ಷಿಸುವನೆಂದು ಆತನಲ್ಲಿ ಭರವಸವಿಟ್ಟಿದ್ದಾನಲ್ಲಾ;ಆತನು ಇವನನ್ನು ಮೆಚ್ಚಿದ್ದಾದರೆ ರಕ್ಷಿಸಲಿ” ಎಂದು ಹೇಳುತ್ತಾರೆ.

9ತಾಯಿಯ ಗರ್ಭದೊಳಗಿಂದ ನನ್ನನ್ನು ಬರಮಾಡಿದವನು ನೀನೇ ಅಲ್ಲವೇ.ತಾಯಿಯ ಎದೆಯಲ್ಲಿ ನನ್ನನ್ನು ನಿಶ್ಚಿಂತೆಯಿಂದ ಇರಿಸಿದವನು ನೀನೇ ಅಲ್ಲವೇ.

10ಹುಟ್ಟಿದಂದಿನಿಂದ ನೀನೇ ನನಗೆ ಆಧಾರ;ತಾಯಿ ಹೆತ್ತಂದಿನಿಂದ ನನ್ನ ದೇವರು ನೀನೇ.

11ನನಗೀಗ ಕಷ್ಟವು ಪ್ರಾಪ್ತವಾಗಿದೆ;ಸಹಾಯಕರು ಯಾರೂ ಇಲ್ಲ, ದೂರವಾಗಿರಬೇಡ.

12ಬಹಳ ಗೂಳಿಗಳು ನನ್ನನ್ನು ಸುತ್ತಿಕೊಂಡಿವೆ;ಬಾಷಾನಿನ ಬಲವುಳ್ಳ ಹೋರಿಗಳು ನನ್ನನ್ನು ಮುತ್ತಿಕೊಂಡಿವೆ.

13ಅವರು ಗರ್ಜಿಸುವ ಉಗ್ರಸಿಂಹಗಳಂತೆ ನನ್ನನ್ನು ನುಂಗುವುದಕ್ಕೆ ಬಾಯಿ ತೆರೆದಿದ್ದಾರೆ.

14ನಾನು ಹೊಯ್ಯಲ್ಪಟ್ಟ ನೀರಿನಂತಿದ್ದೇನೆ;ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿದೆ.ನನ್ನ ಹೃದಯ ಮೇಣದಂತೆ ನನ್ನಲ್ಲಿ ಕರಗಿಹೋಗಿದೆ.

15ನನ್ನ ಶಕ್ತಿಯು ಬೋಕಿಯ ಹಾಗೆ ಒಣಗಿಹೋಗಿದೆ;ನನ್ನ ನಾಲಿಗೆಯು ಬಾಯಿಯ ಅಂಗಳಕ್ಕೆ ಹತ್ತಿಹೋಗಿದೆ.ನೀನು ನನ್ನನ್ನು ಮಣ್ಣಿಗೆ ಸೇರಿಸುತ್ತೀ.

16ನಾಯಿಗಳು ನನ್ನನ್ನು ಸುತ್ತಿಕೊಂಡಿವೆ;ದುಷ್ಟರ ಗುಂಪು ನನ್ನನ್ನು ಆವರಿಸಿಕೊಂಡಿದೆ.ನನ್ನ ಕೈಕಾಲುಗಳನ್ನು ತಿವಿದಿದ್ದಾರೆ.

17ನನ್ನ ಎಲುಬುಗಳನ್ನೆಲ್ಲಾ ಎಣಿಸುವುದಕ್ಕಾಗುವುದು;ಅವರೋ ನನ್ನನ್ನು ನೋಡಿ ನೋಡಿ ಹಿಗ್ಗುತ್ತಾರೆ.

18ನನ್ನ ಮೇಲ್ಹೊದಿಕೆಯನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ;ನನ್ನ ಅಂಗಿಗಾಗಿ ಚೀಟುಹಾಕುತ್ತಾರೆ.

19ಯೆಹೋವನೇ, ನನ್ನ ರಕ್ಷಕನೇ, ನೀನಾದರೋ ದೂರವಾಗಿರಬೇಡ;ಬೇಗ ಬಂದು ಸಹಾಯಮಾಡು.

20ಕತ್ತಿಗೆ ಸಿಕ್ಕದಂತೆ ನನ್ನನ್ನು ತಪ್ಪಿಸು;ನನ್ನ ಪ್ರಿಯ ಪ್ರಾಣವು ನಾಯಿಯ ವಶವಾಗದಂತೆ ಕಾಪಾಡು.

21ಸಿಂಹಗಳ ಬಾಯಿಂದ ರಕ್ಷಿಸು, ಕಾಡುಕೋಣಗಳ ಕೊಂಬುಗಳಿಂದ ನನ್ನನ್ನು ತಪ್ಪಿಸು.

22ನಿನ್ನ ನಾಮ ಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು;ಸಭಾಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.

23ಯೆಹೋವನ ಭಕ್ತರೇ, ಆತನನ್ನು ಸ್ತುತಿಸಿರಿ;ಯಾಕೋಬ ವಂಶದವರೇ, ನೀವೆಲ್ಲರೂ ಆತನನ್ನು ಕೊಂಡಾಡಿರಿ.ಇಸ್ರಾಯೇಲ್ ವಂಶಸ್ಥರೇ, ನೀವೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ.

24ಆತನು ಕುಗ್ಗಿಹೋದವನ ದುರವಸ್ಥೆಯನ್ನು ತಿರಸ್ಕರಿಸಲಿಲ್ಲ,ಅದಕ್ಕೆ ಅಸಹ್ಯಪಡಲಿಲ್ಲ;ತನ್ನ ಮುಖವನ್ನು ಅವನಿಗೆ ಮರೆಮಾಡದೆ,ಅವನ ಪ್ರಾರ್ಥನೆಗೆ ಕಿವಿಗೊಟ್ಟನು.

25ನಾನು ಮಹಾಸಭೆಯಲ್ಲಿ ಮಾಡುವ ಸ್ತೋತ್ರಕ್ಕೆ ನೀನೇ ಆಧಾರನು;ನನ್ನ ಹರಕೆಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು.

26ದೀನರು ಉಂಡು ತೃಪ್ತರಾಗುವರು;ಯೆಹೋವನ ಭಕ್ತರೆಲ್ಲರೂ ಆತನನ್ನು ಕೊಂಡಾಡುವರು.ಅವರ ಅಂತರಾತ್ಮವು ಯಾವಾಗಲು ಚೈತನ್ಯವುಳ್ಳದ್ದಾಗಿರಲಿ.

27ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು;ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.

28ರಾಜ್ಯವು ಯೆಹೋವನದೇ;ಎಲ್ಲಾ ಜನಾಂಗಗಳಿಗೂ ಆತನೇ ಒಡೆಯನು.

29ಭೂಲೋಕದಲ್ಲಿರುವ ಪುಷ್ಟರೆಲ್ಲರೂ ಆರಾಧಿಸುವರು;ತಮ್ಮ ಜೀವವನ್ನು ಉಳಿಸಿಕೊಳ್ಳಲಾರದೆ ಮಣ್ಣು ಪಾಲಾಗುವವರೆಲ್ಲರೂ ಆತನಿಗೆ ಅಡ್ಡಬೀಳುವರು.

30ಆತನನ್ನು ಸೇವಿಸುವವರ ಸಂತಾನದವರುಯೆಹೋವನ ಸಂತಾನದವರೆಂದು ಎಣಿಸಲ್ಪಡವರು.

31ಅವರು ಬಂದು ಆತನ ನೀತಿಯನ್ನೂ,ಆತನು ನಡೆಸಿದ ಕಾರ್ಯಗಳನ್ನೂ ಮುಂದೆ ಹುಟ್ಟುವ ಜನಕ್ಕೆ ತಿಳಿಸುವರು.

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]