Side by side with the Father's Heart Bible™ ಬಿಲ್ದದನ ವಾದ
1ಆಗ ಶೂಹ್ಯನಾದ ಬಿಲ್ದದನು ಉತ್ತರಕೊಟ್ಟು ಹೀಗೆಂದನು:
2“ಯೋಬನೇ, ಈ ಮಾತುಗಳನ್ನು ನೀನು ಯಾವಾಗ ಕೊನೆಗೊಳಿಸುತ್ತೀ?ವಿವೇಕಿಯಾಗು, ಆಮೇಲೆ ಮಾತನಾಡೋಣ.
3ನಮ್ಮನ್ನು ಮೃಗಗಳೆಂದು ಎಣಿಸಿರುವೆಯಾ?ನಿನ್ನ ದೃಷ್ಟಿಯಲ್ಲಿ ನಾವು ದಡ್ಡರೋ?
4ಕೋಪದಿಂದ ನಿನ್ನನ್ನು ನೀನೇ ಸೀಳಿಕೊಳ್ಳುವೆಯಾ?ನಿನ್ನ ನಿಮಿತ್ತ ಭೂಮಿ ಹಾಳಾಗಬೇಕೋ?ಬಂಡೆಯು ತನ್ನ ಸ್ಥಳದಿಂದ ತೊಲಗಬೇಕೋ?
5“ಹೌದು, ನಿಶ್ಚಯವಾಗಿ ದುಷ್ಟರ ಬೆಳಕು ಆರಿಹೋಗುವುದು;ಅವನ ಬಾಳಿನ ಬೆಂಕಿಯ ಜ್ವಾಲೆಯು ಉರಿಯದೆ ಹೋಗುವುದು.
6ಅವನ ಗುಡಾರದಲ್ಲಿ ಬೆಳಕು ಕತ್ತಲಾಗುವುದು;ಅವನ ಮೇಲಣ ತೂಗು ದೀಪವು ಆರಿಹೋಗುವುದು.
7ಅವನ ಬಲವುಳ್ಳ ಹೆಜ್ಜೆಗಳು ದುರ್ಬಲಗೊಳ್ಳುವುದು;ಅವನ ಯೋಜನೆಗಳೇ ಅವನನ್ನು ಕೆಡವಿಹಾಕುವವು.
8ಏಕೆಂದರೆ ದುಷ್ಟನು ತನ್ನ ಹೆಜ್ಜೆಗಳಿಂದಲೇ ಬಲೆಯಲ್ಲಿ ಬೀಳುವನು;ಅವನು ಕುಣಿಯಲ್ಲಿ ಬಿದ್ದು ಅಲೆದಾಡುವನು.
9ಬೋನು ಅವನ ಹಿಮ್ಮಡಿಯನ್ನು ಹಿಡಿದುಕೊಳ್ಳುವುದು;ಉರುಳು ಅವನನ್ನು ಬಿಗಿಯಾಗಿ ಹಿಡಿದಿಟ್ಟುಕೊಳ್ಳುವುದು.
10ನೆಲದ ಮೇಲೆ ಪಾಶವೂ,ದಾರಿಯಲ್ಲಿ ಜಾಲವೂ ಅವನಿಗೆ ಹೊಂಚಿಕೊಂಡಿರುವುವು.
11ಸುತ್ತಲೂ ದಿಗಿಲುಗಳು ಅವನನ್ನು ಹೆದರಿಸಿ,ಅವನ ಕಾಲುಗಳನ್ನು ಓಡುವಂತೆ ಮಾಡುವುವು.
12ಅವನ ಬಲವು ಕುಸಿಯುವುದು;ವಿನಾಶವು ಅವನ ಬೀಳುವಿಕೆಗಾಗಿ ಸಿದ್ಧವಾಗಿರುವುದು.
13ಅದು ಅವನ ಚರ್ಮದ ಬಲವನ್ನು ತಿಂದುಬಿಡುವುದು;ಮರಣದ ಚೊಚ್ಚಲತನವು ಅವನ ಅಂಗಾಂಗಗಳನ್ನು ನುಂಗಿಬಿಡುವುದು.
14ಅವನು ಭದ್ರತೆಯ ಗುಡಾರದಿಂದ ಹೊರಬೀಳುವನು.ಅವನು ಭಯಂಕರ ಅರಸನ ಬಳಿಗೆ ಸಾಗಬೇಕಾಗುವುದು.
15ಬೆಂಕಿಯು ಅವನ ಮನೆಯನ್ನು ಸುಡುವುದು;ಅವನ ಮನೆಯ ಮೇಲೆ ಗಂಧಕವನ್ನು ಎರಚಲಾಗುವುದು.
16ಬುಡದಿಂದ ಅವನ ಬೇರುಗಳು ಒಣಗುವುವು;ಮೇಲಿನಿಂದ ಅವನ ರೆಂಬೆಯು ಬಾಡುವುದು.
17ಅವನ ಸ್ಮರಣೆಯು ಭೂಮಿಯಿಂದ ಅಳಿದುಹೋಗುವುದು;ನಾಡಿನಲ್ಲಿ ಅವನ ಹೆಸರು ಇಲ್ಲದೆ ಹೋಗುವುದು.
18ಬೆಳಕಿನಿಂದ ಅವನನ್ನು ಕತ್ತಲೆಗೆ ದಬ್ಬಲಾಗುವುದು;ಅವನು ಲೋಕದಿಂದ ಬಹಿಷ್ಕರಿಸಲಾಗುವನು.
19ಅವನ ಜನರಲ್ಲಿ ಅವನಿಗೆ ಮಗನೂ, ಮೊಮ್ಮಗನೂ ಇರುವುದಿಲ್ಲ,ಅವನು ವಾಸಿಸಿದ ಸ್ಥಳದಲ್ಲಿ ಯಾರೂ ಉಳಿಯುವುದಿಲ್ಲ.
20ಪಶ್ಚಿಮ ಜನರು ಅವನ ಸ್ಥಿತಿಯನ್ನು ನೋಡಿ ಆಶ್ಚರ್ಯಪಡುವರು;ಪೂರ್ವದ ಕಡೆಯವರನ್ನು ದಿಗಿಲು ಹಿಡಿಯುವುದು.
21ನಿಶ್ಚಯವಾಗಿ ದುಷ್ಟರ ನೆಲೆಯು ಹೀಗೆಯೇ ಇರುವುದು;ದೇವರನ್ನು ಅರಿಯದವನ ಸ್ಥಿತಿ ಇದೇ.”