Skip to content
The Believer's Library

Biblica® Open Kannada Contemporary Version 2022

Proverbs 13 OKCV

Side by side with the Father's Heart Bible™

1ಜ್ಞಾನಿಯಾದ ಮಗನು ತನ್ನ ತಂದೆಯ ಉಪದೇಶವನ್ನು ಸ್ವೀಕರಿಸುತ್ತಾನೆ;ಆದರೆ ಅಪಹಾಸ್ಯ ಮಾಡುವವನು ಗದರಿಕೆಯನ್ನು ಕೇಳುವುದಿಲ್ಲ.

2ತನ್ನ ಬಾಯಿಯ ಫಲದಿಂದ ಒಬ್ಬ ಮನುಷ್ಯನು ಶ್ರೇಷ್ಠವಾದದ್ದನ್ನು ಆನಂದಿಸುತ್ತಾನೆ,ಆದರೆ ವಿಶ್ವಾಸದ್ರೋಹಿಗಳಿಗೆ ಹಿಂಸೆಯ ಹಸಿವು ಇರುತ್ತದೆ.

3ತನ್ನ ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ;ತನ್ನ ತುಟಿಗಳನ್ನು ಹತೋಟಿಯಲ್ಲಿಡದವನು ನಾಶವಾಗುವನು.

4ಸೋಮಾರಿಯ ಹಸಿವು ಎಂದಿಗೂ ತುಂಬುವುದಿಲ್ಲ;ಆದರೆ ಶ್ರಮಪಡುವವರ ಆಸೆಗಳು ಸಂಪೂರ್ಣವಾಗಿ ಈಡೇರುವವು.

5ನೀತಿವಂತನು ಸುಳ್ಳನ್ನು ಹಗೆಮಾಡುತ್ತಾನೆ,ಆದರೆ ದುಷ್ಟರು ತಮ್ಮನ್ನು ತಾವೇ ದುರ್ವಾಸನೆಗೊಳಪಡಿಸಿಕೊಳ್ಳುತ್ತಾರೆಮತ್ತು ತಮ್ಮ ಮೇಲೆ ಅವಮಾನವನ್ನು ತಂದುಕೊಳ್ಳುತ್ತಾರೆ.

6ನೀತಿಯು ಯಥಾರ್ಥವಂತನನ್ನು ಕಾಪಾಡುತ್ತದೆ;ಆದರೆ ದುಷ್ಟತನವು ಪಾಪಿಯನ್ನು ಕೆಡವುತ್ತದೆ.

7ಬಡವನಾಗಿದ್ದರೂ ಐಶ್ವರ್ಯವಂತನಾಗಿ ನಟಿಸುವವನು ಇದ್ದಾನೆ;ಮತ್ತೊಬ್ಬನು ದರಿದ್ರನಾಗಿ ಕಾಣಿಸಿದರೂ ಬಹು ಸಿರಿವಂತನೇ.

8ಐಶ್ವರ್ಯವಂತನ ಪ್ರಾಣದ ವಿಮೋಚನೆಯು ಅವನ ಐಶ್ವರ್ಯದಿಂದಲೇ;ಆದರೆ ಬಡವನು ಬೆದರಿಕೆಗಳಿಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ.

9ನೀತಿವಂತರ ಬೆಳಕು ಪ್ರಕಾಶಮಾನವಾಗಿ ಹೊಳೆಯುತ್ತದೆ;ದುಷ್ಟರ ದೀಪವು ಆರಿಹೋಗುವುದು.

10ಎಲ್ಲಿ ಗರ್ವವೋ ಅಲ್ಲಿ ಕಲಹ;ಆದರೆ ಒಳ್ಳೆಯ ಸಲಹೆಯನ್ನು ತೆಗೆದುಕೊಳ್ಳುವವರಲ್ಲಿ ಜ್ಞಾನವು ಕಂಡುಬರುತ್ತದೆ.

11ಅಪ್ರಾಮಾಣಿಕವಾಗಿ ಹೊಂದಿದ ಸಂಪತ್ತು ಕ್ಷಯಿಸುವುದು;ಪ್ರಯಾಸದಿಂದ ಕೂಡಿಸಿದ ಸಂಪತ್ತು ವೃದ್ಧಿಗೊಳ್ಳುವುದು.

12ನಿರೀಕ್ಷೆ ತಡವಾದರೆ ಹೃದಯವು ಅಸ್ವಸ್ಥಗೊಳ್ಳುತ್ತದೆ;ಆಶೆಯು ಈಡೇರಿದರೆ, ಅದು ಜೀವಕರವಾದ ವೃಕ್ಷವು.

13ದೇವರ ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು;ಆಜ್ಞೆಗೆ ಭಯಪಡುವವನು ಪ್ರತಿಫಲ ಹೊಂದುವನು.

14ಮರಣದ ಪಾಶಗಳಿಂದ ತಪ್ಪಿಸಿಕೊಳ್ಳುವುದಕ್ಕೆಜ್ಞಾನವಂತರ ಉಪದೇಶವು ಜೀವದ ಬುಗ್ಗೆಯಾಗಿದೆ.

15ಒಳ್ಳೆಯ ಪ್ರಜ್ಞೆ ಇರುವ ವ್ಯಕ್ತಿಯನ್ನು ಗೌರವಿಸಲಾಗುತ್ತದೆ;ಆದರೆ ವಿಶ್ವಾಸದ್ರೋಹಿಯ ಮಾರ್ಗವು ನಾಶಕರವಾಗಿದೆ.

16ಪ್ರತಿ ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ;ಆದರೆ ಮೂರ್ಖನು ತನ್ನ ಮೂರ್ಖತ್ವವನ್ನು ಹೊರಗೆಡವುತ್ತಾನೆ.

17ದುಷ್ಟ ದೂತನು ಕೇಡಿಗೆ ಬೀಳುತ್ತಾನೆ;ಆದರೆ ನಂಬಿಗಸ್ತನಾದ ರಾಯಭಾರಿಯು ಆರೋಗ್ಯದಾಯಕನು.

18ಬೋಧನೆಯನ್ನು ಕಡೆಗಣಿಸುವವನಿಗೆ ಬಡತನವೂ, ಅವಮಾನವೂ ಬರುವುವು;ಗದರಿಕೆಯನ್ನು ಗಮನಿಸುವವನು ಸನ್ಮಾನ ಹೊಂದುವನು.

19ಕನಸುಗಳು ನನಸಾಗುವುದನ್ನು ನೋಡುವುದು ಆಹ್ಲಾದಕರವಾಗಿರುತ್ತದೆ;ಕೆಟ್ಟತನದಿಂದ ತಿರುಗುವುದು ಮೂರ್ಖರಿಗೆ ಅಸಹ್ಯವಾಗಿದೆ.

20ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗುವನು;ಆದರೆ ಮೂರ್ಖರ ಜೊತೆಗಾರನು ಸಂಕಟಪಡುವನು.

21ವಿಪತ್ತು ಪಾಪಿಗಳನ್ನು ಹಿಂಬಾಲಿಸುತ್ತದೆ;ಆದರೆ ನೀತಿವಂತರಿಗೆ ಒಳ್ಳೆಯದು ಪ್ರತಿಫಲವಾಗುವುದು.

22ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಟ್ಟುಬಿಡುವನು;ಆದರೆ ಪಾಪಿಯ ಸಂಪತ್ತು ನೀತಿವಂತರಿಗಾಗಿ ಸಂಗ್ರಹವಾಗಿದೆ.

23ಬಡವರಿಗೆ ಜವುಳು ಭೂಮಿಯಲ್ಲಿಯೂ ಬಹು ಬೆಳೆಯು ಸಿಕ್ಕುತ್ತದೆ;ಅನ್ಯಾಯವು ಅದನ್ನು ಹಾರಿಸಿಬಿಡುವುದು.

24ಬೆತ್ತವನ್ನು ಹಿಡಿಯದವನು ತನ್ನ ಮಗನನ್ನು ಹಗೆಮಾಡುತ್ತಾನೆ;ಆದರೆ ತಮ್ಮ ಮಕ್ಕಳನ್ನು ಪ್ರೀತಿಸುವವನು ಅವರನ್ನು ಶಿಸ್ತು ಮಾಡಲು ಜಾಗರೂಕರಾಗಿರುತ್ತಾನೆ.

25ನೀತಿವಂತನು ತನ್ನ ಪ್ರಾಣವು ತೃಪ್ತಿಯಾಗುವವರೆಗೆ ತಿನ್ನುತ್ತಾನೆ;ದುಷ್ಟರ ಹೊಟ್ಟೆಗೆ ಕೊರತೆಯಾಗುವುದು.

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]